ತಮಿಳುನಾಡು

ತಮಿಳುನಾಡಿನಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ರವರು ನವೆಂಬರ್ 09ರಂದು ತಮಿಳುನಾಡು ರಾಜ್ಯದ ಕಾಂಗ್ರೆಸ್ ಉಸ್ತುವಾರಿ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಸಂಧರ್ಭದಲ್ಲಿ ಅವರು ”ಕಾಂಗ್ರೆಸ್ ಪಕ್ಷವು ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಸಿದ್ಧಾಂತವನ್ನು ಅಳವಡಿಸಿಕೊಂಡು ಆ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿದೆ. ಎಲ್ಲ ಜಾತಿ, ಧರ್ಮದ ಜನರನ್ನು ಒಳಗೊಂಡ ಬಹುತ್ವದ ಭಾರತ ನಿರ್ಮಾಣ ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ನಿರ್ಮಿಸಲು ಸಾಧ್ಯವಿದೆ ಮತ್ತು ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಪ್ರಬಲ ಪ್ರತಿಸ್ಪರ್ಧಿ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ” ಎಂದವರು ಹೇಳಿಕೊಂಡಿದ್ದಾರೆ.ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ ಅಣ್ಣಾಮಲೈ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವುದರ ಬೆನ್ನಿಗೆ ಇದೀಗ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರುತ್ತಿರುವುದು ತಮಿಳುನಾಡು ಕಾಂಗ್ರೆಸ್ ಗೆ ಆನೆಬಲ ಒದಗಿದಂತಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಅಥವಾ ಸ್ಥಾನದ ಆಕಾಂಕ್ಷಿಯಾಗಿ ನಾನು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿಲ್ಲ. ದೇಶದಲ್ಲಿ ಮತ್ತೆ 2014ರ ಮೊದಲಿನ ಭಾವೈಕ್ಯತೆ, ಸೌಹಾರ್ಧತೆ ಮೂಡಿಸುವುದೇ ನನ್ನ ಗುರಿಯಾಗಿದೆ. ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಸಾಧ್ಯವಿದೆ ಎಂದವರು ಹೇಳಿಕೊಂಡಿದ್ದಾರೆ.

ಎರಡು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಸೆಂಥಿಲ್ 2019ಸೆಪ್ಟೆಂಬರ್ ಮೊದಲ ವಾರದಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಇವರು ಹಲವು ಜನಪರ ಕಾರ್ಯಗಳಿಂದ ಜನಪ್ರಿಯರಾಗಿದ್ದರು. ತನ್ನ ಹುದ್ದೆಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ “ದೇಶ ಇಂದು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಇದೆ, ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯ ಅಪಾಯದಲ್ಲಿದೆ ಇಂತಹ ಸಂದಿಗ್ಧ ಕಾಲಘಟ್ಟದಲ್ಲಿ ನಾನು ಓರ್ವ ಐಎಎಸ್‌ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂದು ಹೇಳಿಕೊಂಡಿದ್ದರು.

2009ರ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಸಸಿಕಾಂತ್ ಸೆಂಥಿಲ್ 2017 ರ ಅಕ್ಟೋಬರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 41 ವರ್ಷ ಪ್ರಾಯದ ಸಸಿಕಾಂತ್ ಸೆಂಥಿಲ್ ಮೂಲತಃ ತಮಿಳುನಾಡು ರಾಜ್ಯದವರಾಗಿದ್ದಾರೆ. ತಿರುಚನಾಪಳ್ಳಿಯ ಭಾರತೀದಾಸನ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2009ರಿಂದ 2012ರ ವರೆಗೆ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಸಿಕಾಂತ್ ಸೆಂಥಿಲ್ ಆ ನಂತರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕೆಲಸ ನಿರ್ವಹಿಸಿದ್ದರು. ಚಿತ್ರದುರ್ಗ ಮತ್ತು ರಾಯಚೂರು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದ ಅವರು 2016ರಲ್ಲಿ ಗಣಿ ಮತ್ತು ಭೂಗರ್ಭ ಇಲಾಖೆ ನಿರ್ಧೇಶಕರಾಗಿ ಸೇವೆ ಸಲ್ಲಿಸಿದ್ದರು.

___________________________________________

►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares